Chennai: ತಮಿಳುನಾಡಿನಲ್ಲಿ DMK ಸರ್ಕಾರ ಅಧಿಕಾರದಿಂದ ಕೆಳಗಿಳಿಯುವವರೆಗೂ ಶೂ ಧರಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಪ್ರತಿಜ್ಞೆ ಮಾಡಿದ್ದಾರೆ.
ಅಣ್ಣಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣವನ್ನು ಸರ್ಕಾರ ನಿರ್ವಹಿಸಿದ ರೀತಿಯನ್ನು ವಿರೋಧಿಸಿ, ಶುಕ್ರವಾರ ಅವರು ತಮ್ಮ ಮನೆಯ ಮುಂದೆ ಆರು ಬಾರಿ ಚಾಟಿಯೇಟು ಹೊಡೆದು ಪ್ರತಿಭಟನೆ ನಡೆಸುವ ಬಗ್ಗೆ ಘೋಷಿಸಿದ್ದಾರೆ.
ಈ ಪ್ರಕರಣದಲ್ಲಿ, ತಮಿಳುನಾಡು ಪೊಲೀಸರು ಸಂತ್ರಸ್ತೆಯ ವೈಯಕ್ತಿಕ ಮಾಹಿತಿಗಳನ್ನು ಸಾರ್ವಜನಿಕಗೊಳಿಸಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದರೆ, ಪೊಲೀಸರು ಅವರನ್ನು ಬಂಧಿಸುತ್ತಾರೆ. ಆದ್ದರಿಂದ, ಇದೀಗ ಅವರು ತಮ್ಮ ಮನೆಗಳ ಹೊರಗಿನ ಪ್ರತ್ಯೇಕ ಪ್ರತಿಭಟನೆಯನ್ನು ಆಯೋಜಿಸಿದ್ದಾರೆ ಎಂದು ಹೇಳಿದರು.