Prayagraj: ಉತ್ತರ ಪ್ರದೇಶದ ಪ್ರಯಾಗ್ರಾಜ್ ಮಹಾಕುಂಭದಲ್ಲಿ (Mahakumbh) ಮಹಿಳೆಯರು ಸ್ನಾನ ಮಾಡಿ ಬಟ್ಟೆ ಬದಲಾಯಿಸುವ ವೀಡಿಯೋಗಳನ್ನು ಚಿತ್ರೀಕರಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಈ ವೀಡಿಯೊಗಳನ್ನು dark web ಸೇರಿದಂತೆ ಕೆಲವೇದಿಕೆಗಳಲ್ಲಿ ಅಪ್ಲೋಡ್ ಮಾಡಲಾಗುತ್ತಿದ್ದು, ಖರೀದಿಸುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಉತ್ತರ ಪ್ರದೇಶದ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ತಂಡ ಈ ಅಪರಾಧವನ್ನು ಪತ್ತೆ ಹಚ್ಚಿದೆ. ಮಹಿಳೆಯರ ಗೌಪ್ಯತೆ ಮತ್ತು ಘನತೆಯ ಉಲ್ಲಂಘನೆಯಾಗುತ್ತಿರುವುದರಿಂದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದೂ ಧಾರ್ಮಿಕ ಕ್ಯಾಲೆಂಡರ್ ನಲ್ಲಿ ಅತಿದೊಡ್ಡ ಮಹಾಕುಂಭದಲ್ಲಿ ಈವರೆಗೆ 50 ಕೋಟಿ ಭಕ್ತರು ಭಾಗವಹಿಸಿದ್ದಾರೆ. ಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ ಪಾಪ ಶುದ್ಧಿಯಾಗುತ್ತದೆ ಎಂಬ ನಂಬಿಕೆ ಹಿಂದೂಗಳಲ್ಲಿ ಇದೆ.
ಕಾನೂನುಬಾಹಿರವಾಗಿ ವೀಡಿಯೊ ಮಾರಾಟ ಮಾಡುವವರನ್ನು ಮತ್ತು ಖರೀದಿಸುವವರನ್ನು ಬಂಧಿಸಲಾಗುವುದು. ಅಪರಾಧ ಸಂಬಂಧಿತ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ 103 ಪ್ರೊಫೈಲ್ ಗಳನ್ನು ಗುರುತಿಸಲಾಗಿದ್ದು, 26 ಖಾತೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.
ಟೆಲಿಗ್ರಾಮ್, ಇನ್ಸ್ಟಾಗ್ರಾಮ್, ಫೇಸ್ಬುಕ್, ಮತ್ತು ಟ್ವಿಟರ್‌ನಲ್ಲಿ ಈ ಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ಪೊಲೀಸರು ಜನತೆಗೆ ಎಚ್ಚರಿಕೆ ನೀಡಿದ್ದು, ಮಹಿಳೆಯರ ಗೌಪ್ಯತೆ ಭಂಗ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.