ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ನಿಮಜ್ಜನೆಯ ವೇಳೆ ನಡೆದ ಗಲಭೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.
ಸಚಿವರ ಪ್ರಕಾರ, ಗಲಭೆ ನಡೆದ ತಕ್ಷಣವೇ 21 ಜನರನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆಗೆ ಐಜಿ ಮತ್ತು 8 ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿದೆ. ವರದಿ ಸಿದ್ಧಪಡಿಸಿ ಶೀಘ್ರದಲ್ಲೇ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು.
ಗಲಭೆಯ ಹಿಂದೆ ರಾಜಕೀಯ ಕಾರಣವಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ತಪ್ಪಿತಸ್ಥರನ್ನು ಯಾರನ್ನೂ ಬಿಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಮಂಡ್ಯ ಸ್ವಾತಂತ್ರ್ಯ ಹೋರಾಟ ಹಾಗೂ ಕಾವೇರಿ ಹೋರಾಟಕ್ಕೆ ಪ್ರಸಿದ್ಧ. ಇಂತಹ ಘಟನೆಗಳು ಸರಿಯಲ್ಲ ಎಂದು ಸಚಿವರು ಹೇಳಿದರು. ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಯಬಾರದು, ಧಾರ್ಮಿಕ ಸಂಘಟನೆಗಳು ಪ್ರಚೋದನೆಗೆ ಒಳಗಾಗಬಾರದು ಎಂದು ಮನವಿ ಮಾಡಿದರು.
ಘಟನೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯಿಸಿದ್ದಾರೆ. ಮಸೀದಿ ಮುಂದೆ ಮೆರವಣಿಗೆ ಹೋದಾಗ ಗಲಾಟೆ ಉಂಟಾಗಿದೆ. ಕಲ್ಲು ತೂರಾಟದಲ್ಲಿ ಹಲವರನ್ನು ಬಂಧಿಸಲಾಗಿದೆ. ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಭಾನುವಾರ ರಾತ್ರಿ ಮದ್ದೂರಿನಲ್ಲಿ ಗಣೇಶ ಮೂರ್ತಿ ನಿಮಜ್ಜನೆಯ ವೇಳೆ ಕಲ್ಲು ತೂರಾಟ ನಡೆದಿದೆ. ಇದರಿಂದಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಘಟನೆ ಖಂಡಿಸಿ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.








