Bengaluru : ಹೆಸರಾಂತ ಕನ್ನಡ ಸಾಹಿತಿ, ಕವಿ, ವಿಮರ್ಶಕ, ನಾಟಕಕಾರ ಚಂದ್ರಶೇಖರ ಪಾಟೀಲ (ಚಂಪಾ) Chandrashekhar Patil ಅವರು ಇಂದು ನಿಧನರಾಗಿದ್ದಾರೆ. 83 ವರ್ಷದ ಚಂಪಾ ಅವರು ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ (Bangalore) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಚಂದ್ರಶೇಖರ ಪಾಟೀಲರು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತಿಮತ್ತೂರಿನಲ್ಲಿ (Hattimattur, Savanur Taluk, Haveri District) 1939 ಜೂನ್ 18 ರಂದು ಜನಿಸಿದರು. ಅವರು ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ಪಡೆದರು. ಎಂ.ಎ. ಪದವಿಯನ್ನು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪಡೆದರು. ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು.
1969ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ೨೦೦೪ ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜೊತೆಗೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದಾರೆ
ಚಂದ್ರಶೇಖರ ಪಾಟೀಲರು ಹೊಂಗನಸ ಹಡಗು, ನಾಳಿಗಿದೋ ಸ್ವಾಗತ, ಚರಿಪನಾದವೊ ಹಾಡು ಹಕ್ಕಿಯೋ ಮುಂತಾದ ಕವನಗಳು,
ಕೊಡೆಗಳು, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಗೌಡಸಾನಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ ಮುಂತಾದ ನಾಟಕಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ.
ಸಾಹಿತಿ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತೀವ್ರ ಸಂತಾಪ ಸೂಚಿಸಿದ್ದಾರೆ.