Delhi: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಿತ್ತು. ಒಂದು ದೇಶ, ಒಂದು ಚುನಾವಣೆ’ (One Nation One Election) ಮಸೂದೆಗೆ ಗುರುವಾರ ಕೇಂದ್ರ ಸಚಿವ ಸಂಪುಟ (NDA Govt) ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಸಂಸತ್ತಿನ ಪ್ರಸ್ತುತ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.
ಈ ಮಸೂದೆ ಮಂಡನೆಯಾಗುವ ಸಾಧ್ಯತೆಯ ಪ್ರಮುಖ ಅಂಶವೆಂದರೆ, 2019ರ ಲೋಕಸಭೆ ಚುನಾವಣೆಯ ವೇಳೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಏಕಕಾಲಕ್ಕೆ ಚುನಾವಣೆ ಕೂಡ ಸೇರಿತ್ತು.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ನಿರ್ವಹಿಸಿ, ಈ ಪ್ರಸ್ತಾವನೆಯನ್ನು ಸರ್ಕಾರ ಮುಂದಿಟ್ಟಿರುವುದು ಗಮನಾರ್ಹ. ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಲೋಕಸಭೆ, ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆಯನ್ನು ಶಿಫಾರಸು ಮಾಡಿದೆ.
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬುಧವಾರ ಮಾತನಾಡಿ, ಪದೇ ಪದೇ ನಡೆಯುವ ಚುನಾವಣೆಗಳು ರಾಷ್ಟ್ರದ ಪ್ರಗತಿಗೆ ಅಡ್ಡಿ ಆಗುತ್ತಿರುವುದಾಗಿ ಹೇಳಿದ್ದರು. ‘ಒಂದು ದೇಶ, ಒಂದು ಚುನಾವಣಾ’ ಕಾಯ್ದೆ ಅಗತ್ಯವಾಗಿದೆ ಎಂದು ಅವರು ಬಲವಾಗಿ ಪ್ರತಿಪಾದಿಸಿದ್ದಾರೆ.