Magadi, Ramanagara : ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಬೊಮ್ಮಾಯಿ (CM Basavaraj Bommai) ಸೋಮವಾರ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ (Dr. C. N. Ashwath Narayan) ಭಾನುವಾರ ಕಾರ್ಯಕ್ರಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವರು ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಐದು ಬಾರಿ ಭೇಟಿಯಾಗಿ ಚರ್ಚಿಸಿದ್ದಾರೆ. ರಾಮನಗರ ಜಿಲ್ಲೆ ಸೇರಿದಂತೆ ಬೆಂಗಳೂರು ಮಹಾನಗರಕ್ಕೂ ಉಪಯುಕ್ತವಾಗಲಿರುವ ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಇದ್ದ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ (ಎನ್.ಜಿ.ಟಿ) ತಡೆಯಾಜ್ಞೆಯನ್ನು ಈಗಾಗಲೇ ತೆರವುಗೊಳಿಸಲಾಗಿದ್ದು ಕಾವೇರಿ ನೀರಿನಲ್ಲಿ ರಾಜ್ಯದ ಪಾಲನ್ನು ಸದ್ಬಳಕೆ ಮಾಡಿಕೊಳ್ಳುವಂತಹ ಯೋಜನೆಯಾಗಿದೆ. ಆದ್ದರಿಂದ ಯೋಜನೆಯ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಯನ್ನು ಕೈಬಿಡಬೇಕು. ಅದರಲ್ಲೂ ಕೊರೊನಾ ಪ್ರಕರಣಗಳು ಪುನಃ ಹೆಚ್ಚುತ್ತಿರುವ ಸಂದರ್ಭದಲ್ಲಿ ಇಂತಹ ಕಾರ್ಯಕ್ರಮಗಳು ಅನಗತ್ಯ ಎಂದು ಹೇಳಿದರು.
ರಾಜ್ಯ ಸರ್ಕಾರ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ ಮಾಡಿದೆ. ರಾಮನಗರ ಮತ್ತು ಮಾಗಡಿ ತಾಲ್ಲೂಕಿನ ಚಿಕ್ಕಕಲ್ಯ ಗ್ರಾಮದಲ್ಲಿ ಪ್ರಧಾನ ಕಾರ್ಯಕ್ರಮಗಳು ನಡೆಯಲಿದ್ದು, ಮುಖ್ಯಮಂತ್ರಿಗಳು ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ಹತ್ತಾರು ಮಹತ್ತ್ವದ ಯೋಜನೆಗಳಿಗೆ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ. ಈ ಕಾಮಗಾರಿಗಳನ್ನೆಲ್ಲ ತ್ವರಿತವಾಗಿ ಮುಗಿಸಲಾಗುವುದು. ಈ ಕಾರ್ಯಕ್ರಮಗಳಲ್ಲದೆ, ಮುಖ್ಯಮಂತ್ರಿ ಬೊಮ್ಮಾಯಿ, ಸಚಿವ ಬಸವರಾಜ ಭೈರತಿ ಮತ್ತು ನಾನು ಮಾಗಡಿ ತಾಲ್ಲೂಕಿನ ಕೆಂಪಾಪುರದಲ್ಲಿರುವ ಕೆಂಪೇಗೌಡರ ಸಮಾಧಿ ಸ್ಥಳಕ್ಕೂ ಭೇಟಿ ನೀಡಿ, ಗೌರವ ಸಲ್ಲಿಸಲಿದ್ದೇವೆ ಎಂದು ಅವರು ತಿಳಿಸಿದರು.
ಮಾಗಡಿ ಶಾಸಕ ಎ.ಮಂಜುನಾಥ್, ಜಿಲ್ಲಾ ಮಟ್ಟದ ಅಧಿಕಾರಿಗಳು ಸಚಿವರ ಜೊತೆ ಉಪಸ್ಥಿತರಿದ್ದರು.