
Bengaluru: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (MUDA) ಅಕ್ರಮವಾಗಿ ತಮ್ಮ ಕುಟುಂಬಸ್ಥರಿಗೆ ನಿವೇಶನ ಪಡೆದಿದ್ದಾರೆ ಎಂಬ ಆರೋಪದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ (High Court) ಏಪ್ರಿಲ್ 28ಕ್ಕೆ ನಿಗದಿಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಪೀಠಕ್ಕೆ ಅರ್ಜಿದಾರರ ಪರ ವಕೀಲರು, ಶನಿವಾರ ನಿಗದಿತ ವಿಚಾರಣೆ ಹಿನ್ನಲೆಯಲ್ಲಿ, ಅದೇ ದಿನ ನ್ಯಾಯಪೀಠದ ಕಲಾಪ ಇಲ್ಲದೆ ಇರುವ ಕಾರಣದಿಂದ ವಿಚಾರಣೆ ಮುಂದೂಡಬೇಕೆಂದು ಮನವಿ ಮಾಡಿದರು.
ವಕೀಲರ ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ, ವಿಚಾರಣೆಯನ್ನು ಏ.28ಕ್ಕೆ ಮುಂದೂಡಲು ಆದೇಶ ನೀಡಿತು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988ರ ಕಲಂ 17ಎ ಅಡಿಯಲ್ಲಿ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಏಕಸದಸ್ಯ ಪೀಠ ರಾಜ್ಯಪಾಲರ ಕ್ರಮವನ್ನು ಸಮರ್ಥಿಸಿಕೊಂಡು, ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶದ ವಿರುದ್ಧ ಸಿದ್ದರಾಮಯ್ಯ ಮತ್ತು ಇತರರು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.