
Bengaluru: ತಮಿಳುನಾಡು (Tamil Nadu) ಸಚಿವ ಪೊನ್ಮುಡಿ ಅವರ ನೇತೃತ್ವದ ನಿಯೋಗ ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಭೇಟಿ ಮಾಡಿತು. ಅವರು ಕ್ಷೇತ್ರ ಮರುವಿಂಗಡನೆ (Delimitation of constituencies) ಸೇರಿದಂತೆ ದಕ್ಷಿಣ ಭಾರತದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿ, ಈ ಕುರಿತು ಕೇಂದ್ರದ ನಡೆ ಬಗ್ಗೆ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ, ತಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಅವರು ಮನವಿ ಮಾಡಿದರು.
ಇದಕ್ಕೂ ಮುನ್ನ, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಈ ಬಗ್ಗೆ ಸಿದ್ದರಾಮಯ್ಯ ಜತೆ ದೂರವಾಣಿ ಮೂಲಕ ಚರ್ಚಿಸಿದ್ದರು. ಸಿಎಂ ಸಿದ್ದರಾಮಯ್ಯ ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದರು.
“ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾಗುವ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಹಾಗೂ ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾಗುವ ಯಾವುದೇ ಕ್ರಮಗಳನ್ನು ನಾವು ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ” ಎಂದು ಸಿದ್ದರಾಮಯ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.