Vijayapura, Devanahalli : ಇತ್ತೀಚಿನ ದಿನಗಳಲ್ಲಿ ಶುದ್ಧ ಗಾಳಿಯ ಕೊರತೆಯ ಸಮಸ್ಯೆ ಹೆಚ್ಚಾಗಿದ್ದು, ಹಳ್ಳಿಗಳಿಗೂ ವಾಯು ಮಾಲಿನ್ಯ (Air Pollution) ತಗುಲದಂತೆ ಎಚ್ಚರ ವಹಿಸಬೇಕಾಗಿದೆ ಎಂದು ಪ್ರಾದೇಶಿಕ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕ ಡಿ.ಬಿ. ನಾಗರಾಜ್ ಹೇಳಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (Government Pre University College) ಶನಿವಾರ ಪ್ರಾದೇಶಿಕ ಸಾರಿಗೆ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದ ಜನ ಗ್ರಾಮೀಣ ಭಾಗಗಳಿಗೆ ವಲಸೆ ಹೋಗುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳ ಪರಿಸರವನ್ನು ಕಾಪಾಡಲು ಎಲ್ಲರೂ ತಮ್ಮ ವಾಹನಗಳನ್ನು ಸರಿಯಾದ ಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸಿ, ಗಿಡಮರಗಳನ್ನು ನೆಟ್ಟು ಪೋಷಣೆ ಮಾಡಬೇಕಾಗಿದೆ ಎಂದು ಸಲಹೆ ನೀಡಿದರು.
ಕಾಲೇಜು ಪ್ರಾಂಶುಪಾಲ ಟಿ. ಗೋಪಾಲಯ್ಯ, ಪರಿಸರ ಮಾಲಿನ್ಯ ಮುಂದುವರಿದರೆ ಭವಿಷ್ಯದಲ್ಲಿ ಉಸಿರಾಟಕ್ಕೂ ಹಣ ಖರ್ಚು ಮಾಡಬೇಕಾದ ಅನಿವಾರ್ಯತೆ ಎದುರಾಗಬಹುದು ಎಂದು ಹೇಳಿದರು. ಆದ್ದರಿಂದ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟು ಪೋಷಣೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿಜಯಪುರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಸಾಧಿಕ್ ಖಾನ್, ಅಪ್ರಾಪ್ತರು ವಾಹನ ಚಾಲನೆ ಮಾಡುವುದು ಕಾನೂನುಬಾಹಿರ ಎಂದು ಎಚ್ಚರಿಸಿದರು. 18 ವರ್ಷ ತುಂಬಿದ ನಂತರ ಮಾತ್ರ ಪರವಾನಗಿ ನೀಡಲಾಗುತ್ತದೆ. ಕಾನೂನು ಉಲ್ಲಂಘನೆ ಮಾಡಿದವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಾರಿಗೆ ಇಲಾಖೆಯ ಪ್ರಥಮ ದರ್ಜೆ ಸಹಾಯಕ ರವಿಚಂದ್ರ, ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಹುಟ್ಟುಹಬ್ಬದಂದು ಸಸಿ ನೆಡುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಲು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಚಂದ್ರಶೇಖರ್, ಸ್ವರ್ಣಕುಮಾರಿ ಮತ್ತು ಇತರರು ಭಾಗವಹಿಸಿದ್ದರು.