Bengaluru: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospital) ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಬೇರೆಡೆ ಖಾಸಗಿ ಪ್ರಾಕ್ಟೀಸ್ ಮಾಡಲು ಅವಕಾಶ ಇರುವುದಿಲ್ಲ ಎಂದು ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ.
ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರಕಾರೀ ಆಸ್ಪತ್ರೆಗಳ ವೈದ್ಯರು ಕರ್ತವ್ಯ ಸಮಯದಲ್ಲಿ ಬೇರೆಡೆ ಕಾರ್ಯ ನಿರ್ವಹಿಸುತ್ತಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಇನ್ನು ಮುಂದೆ ವೈದ್ಯರು ಬೆಳಿಗ್ಗೆ 9, ಮಧ್ಯಾಹ್ನ 2, 3 ಮತ್ತು ಸಂಜೆ 4 ಗಂಟೆಗೆ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಬೇಕು. ಇದರ ಆಧಾರದ ಮೇಲೆ ಸಂಬಳ ನೀಡಲಾಗುವುದು.
ಜಿಲ್ಲಾಸ್ಪತ್ರೆಗಳಲ್ಲಿ ಡಿಎಚ್ಒ, ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎನ್ಎಂಸಿ ಮಾರ್ಗಸೂಚಿಗಳಂತೆ ವೈದ್ಯರು ಕೆಲಸ ಮಾಡಬೇಕು ಎಂದು ಸಚಿವರು ತಿಳಿಸಿದ್ದಾರೆ.
ಪ್ರತಿಯೊಂದು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಒಪಿಡಿ ಸೇವೆ ಒದಗಿಸಬೇಕು. ಶಿವಮೊಗ್ಗ ಮೆಗಾನ್ ಆಸ್ಪತ್ರೆ ಸೇರಿದಂತೆ ಕೆಲವು ಆಸ್ಪತ್ರೆಗಳಲ್ಲಿ ಸಣ್ಣ ಸಮಸ್ಯೆಗಳಿವೆ, ಅವುಗಳನ್ನು ಸರಿಪಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.