Karwar: ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿರುವ ಹಿನ್ನೆಲೆಯಲ್ಲಿ, ನಿರಂತರ ಮಳೆಯ (heavy rains) ಕಾರಣ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಅಂಗನವಾಡಿಗಳಿಗೆ ಇಂದು (ಜುಲೈ 23) ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರ ಆದೇಶದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಅವರು 2005ರ ವಿಪತ್ತು ನಿರ್ವಹಣಾ ಕಾಯ್ದೆಯ ಕಲಂ 34(ಎಂ) ಅಡಿಯಲ್ಲಿ ನೀಡಿರುವ ಅಧಿಕಾರ ಬಳಸಿಕೊಂಡಿದ್ದಾರೆ.
ಆಯಾ ತಾಲೂಕುಗಳ ತಹಶೀಲ್ದಾರರ ಮನವಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಪತ್ರದ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ರಜೆ ದಿನಗಳನ್ನು ನಂತರದಲ್ಲಿ ಪೂರೈಸುವಂತೆ ಸಂಬಂಧಿತ ಇಲಾಖೆಗೆ ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಮಂಡ್ಯ, ಚಾಮರಾಜನಗರ, ಧಾರವಾಡ, ಬೀದರ್, ಬೆಳಗಾವಿ, ರಾಯಚೂರು, ಕಲಬುರಗಿ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೊಪ್ಪಳದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮಳೆ ಮತ್ತೆ ಆರ್ಭಟಿಸತೊಡಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಕಡೆಗಳಲ್ಲಿ ಗುಡ್ಡ ಕುಸಿತ, ರಸ್ತೆಗಳ ಬಂದ್ ಆಗುವಿಕೆ, ಸಂಪರ್ಕ ಕಡಿತದ ಘಟನೆಗಳು ಸಂಭವಿಸಿವೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಂಗನಮಕ್ಕಿಯಲ್ಲಿ ಕಟ್ಟಡವೊಂದು ಕುಸಿತವಾಗಿದ್ದು, ಮಂಗಳೂರಿನಲ್ಲಿ ಕಾಂಪೌಂಡ್ ಕುಸಿತದಿಂದ ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ.