ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಆಗಸ್ಟ್ 29 (ಶುಕ್ರವಾರ)ರಂದು ಎಲ್ಲಾ ಶಾಲೆ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಆದೇಶದಂತೆ ಅಂಗನವಾಡಿ ಕೇಂದ್ರಗಳಿಗೂ ರಜೆ ಅನ್ವಯಿಸುತ್ತದೆ.
ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯಂತೆ ಮಳೆ ಇನ್ನೂ ಮುಂದುವರಿಯುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಪಾಲಕರು ಮಕ್ಕಳನ್ನು ನದಿ, ಕೆರೆ, ಸಮುದ್ರತೀರಗಳ ಬಳಿ ಕರೆದೊಯ್ಯಬಾರದು ಎಂದು ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಹೋಗದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣೆಗೆ ಸಜ್ಜಾಗಿರಬೇಕು.
ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ ಮತ್ತು ಸಮುದ್ರತೀರಗಳಿಗೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಶಿವಮೊಗ್ಗ, ಸಾಗರ, ಹೊಸನಗರ, ಸೊರಬ ಹಾಗೂ ಶಿಕಾರಿಪುರ ತಾಲೂಕುಗಳ ಅಂಗನವಾಡಿ, ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಆದರೆ ಭದ್ರಾವತಿ ಹಾಗೂ ತೀರ್ಥಹಳ್ಳಿ ತಾಲೂಕಿನ ವಿದ್ಯಾಸಂಸ್ಥೆಗಳಿಗೆ ರಜೆ ಇಲ್ಲ. ಮುಂದಿನ ದಿನಗಳಲ್ಲಿ ಬಿಟ್ಟ ಪಾಠಗಳನ್ನು ಪೂರ್ಣಗೊಳಿಸಲಾಗುತ್ತದೆ.
ಆಗಸ್ಟ್ 27ರಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 1ರವರೆಗೂ ಮಳೆಯ ಸಾಧ್ಯತೆ ಇದೆ.
ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ಹಾಸನ, ತುಮಕೂರು, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ನಿರೀಕ್ಷೆ ಇದೆ.