Bengaluru : ದಿನೇ ದಿನೇ ಬೆಂಗಳೂರು ನಗರದಲ್ಲಿ Covid-19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಇಂದಿರಾನಗರದ (Indiranagar) ಸರ್ ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಯನ್ನು (Sir CV Raman General Hospital) Covid-19 ಚಿಕಿತ್ಸೆಗೆ ಮತ್ತೆ ಮೀಸಲಿಡಲಾಗಿದೆ ಎಂದು ಆರೋಗ್ಯ ಇಲಾಖೆಯ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ.
ನಗರದಲ್ಲಿ ವಿಕ್ಟೋರಿಯಾ (Victoria Hospital) ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿಯೂ ಕೋವಿಡ್ ಚಿಕಿತ್ಸೆಗೆ ಹಾಸಿಗೆಗಳನ್ನು ಮೀಸಲಿಡಲಾಗಿದ್ದು ಸಿ.ವಿ.ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಾಸಿಗೆಗಳು ಭರ್ತಿಯಾದ ಬಳಿಕ ಉಳಿದ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರನ್ನು ದಾಖಲಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ತಿಳಿಸಿದೆ.
2020ರಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದಾಗ ಈ ಆಸ್ಪತ್ರೆಯ ಎಲ್ಲ ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡಲಾಗಿತ್ತು. 2021ರಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದ ಬಳಿಕ ಇತರೆ ರೋಗಿಗಳಿಗೂ ಚಿಕಿತ್ಸೆ ಪ್ರಾರಂಭಿಸಲಾಗಿತ್ತು. ಈಗ ಮತ್ತೆ ಪ್ರಕರಣಗಳು ಹೆಚ್ಛಾಗುತ್ತಿರುವುದರಿಂದ ಉಳಿದ ರೋಗಿಗಳ ಚಿಕಿತ್ಸೆಗಳನ್ನು ಸ್ಥಗಿತ ಮಾಡಿ ಕೊರೊನಾ ಸೋಂಕಿತರಿಗೆ ಮಾತ್ರ ಚಿಕಿತ್ಸೆ ಒದಗಿಸಲಾಗುತ್ತದೆ ಎಂದು ಆಯುಕ್ತರು ಹೇಳಿದ್ದಾರೆ.
ಕೋವಿಡ್‌ನ ಸಂಭಾವ್ಯ ಮೂರನೇ ಅಲೆ ನಿಭಾಯಿಸಲು ಮುನ್ನೆಚ್ಚರಿಕೆಯಾಗಿ ಕೋವಿಡ್ ಚಿಕಿತ್ಸೆಗೆ ಮೀಸಲಿಟ್ಟ 1,849 ಹಾಸಿಗೆಗಳಲ್ಲಿ ಸದ್ಯ 1,813 ಹಾಸಿಗೆಗಳನ್ನ ಖಾಲಿ ಉಳಿಸಿಕೊಳ್ಳಲಾಗಿದೆ. ಸದ್ಯ ವಿಕ್ಟೋರಿಯಾದಲ್ಲಿ 416 HDU ಹಾಸಿಗೆಗಳು, 30 ICU ಹಾಗೂ 54 Ventilator ಸಹಿತ ಐಸಿಯು ಹಾಸಿಗೆಗಳು ಕೋವಿಡ್ ಚಿಕಿತ್ಸೆಗೆ ಲಭ್ಯವಿದೆ.