Bengaluru: ಮಹತ್ವದ ಬೆಳವಣಿಗೆಯೊಂದರಲ್ಲಿ, ಮಸೀದಿ (mosque) ಆವರಣದಲ್ಲಿ ‘ಜೈ ಶ್ರೀರಾಮ್’ (Jai Shri Ram) ಘೋಷಣೆ ಕೂಗಿದ ಆರೋಪದ ಮೇಲೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯ (criminal case) ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ರದ್ದುಗೊಳಿಸಿದೆ.
ಮೊಕದ್ದಮೆಯ ವಿಚಾರಣೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ, ‘ಜೈ ಶ್ರೀರಾಮ್’ ಎಂದು ಕೂಗುವುದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ, ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂಬುದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.
ದೂರುದಾರರು ಖುದ್ದು ಹೇಳಿರುವಂತೆ ಆ ಭಾಗದಲ್ಲಿ ಹಿಂದೂ – ಮುಸ್ಲಿಮರು ಒಟ್ಟಾಗಿ ಸೌರ್ಹಾದತೆಯಿಂದ ಜೀವಿಸುತ್ತಿರುವುದಾಗಿ ಹೇಳಿದ್ದಾರೆ. ಆದರೆ, ಅರ್ಜಿದಾರರ ವಿರುದ್ಧ ಐಪಿಸಿ ಸೆಕ್ಷನ್ 295 ‘A’ (ಧಾರ್ಮಿಕ ಭಾವನೆ, ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು) ಅಡಿಯಲ್ಲಿ ದೂರು ದಾಖಲಿಸಲಾಗಿದೆ.
ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗೆ ಹೇಗೆ ಧಕ್ಕೆಯಾಗುತ್ತದೆಂದು ಅರ್ಥವಾಗುತ್ತಿಲ್ಲ. ಜತೆಗೆ, ಪ್ರಕರಣದಲ್ಲಿ ಯಾವುದೇ ಅಪರಾಧ ಕಂಡು ಬರುತ್ತಿಲ್ಲ.
ಹಾಗಾಗಿ, ಅರ್ಜಿದಾರರ ವಿರುದ್ಧ ಮುಂದಿನ ಪ್ರಕ್ರಿಯೆಗಳಿಗೆ ಅನುಮತಿ ನೀಡುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ಆದಾಗ್ಯೂ, ಎಂಎಸ್ ಧೋನಿ ವರ್ಸಸ್ ಯರ್ರಗುಂಟ್ಲಾ ಶ್ಯಾಮಸುಂದರ್ ಪ್ರಕರಣದಲ್ಲಿನ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಹೈಕೋರ್ಟ್, ಶಾಂತಿ ಸ್ಥಾಪನೆ ಅಥವಾ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಯಾವುದೇ ಪರಿಣಾಮ ಬೀರದ ಕೃತ್ಯಗಳು ಐಪಿಸಿ ಸೆಕ್ಷನ್ 295 ಎ ಅಡಿಯಲ್ಲಿ ಅಪರಾಧಕ್ಕೆ ಕಾರಣವಾಗುವುದಿಲ್ಲ ಎಂದು ಹೇಳಿದೆ.