
ಜಮ್ಮು-ಕಾಶ್ಮೀರ ವಿಚಾರವನ್ನು (Jammu and Kashmir dispute) ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪ್ರಸ್ತಾಪಿಸಿದ ಪಾಕಿಸ್ತಾನಕ್ಕೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UN Security Council) ಸಭೆಯಲ್ಲಿ, ಪಾಕಿಸ್ತಾನವು “ಭಯೋತ್ಪಾದನೆಯ ಜಾಗತಿಕ ಕೇಂದ್ರ” ಎಂದು ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ (Parvathaneni Harish) ತಿಳಿಸಿದ್ದಾರೆ.
ಪಾಕಿಸ್ತಾನವು ಭಯೋತ್ಪಾದನೆ ವಿರುದ್ಧ ಹೋರಾಟ ಮಾಡುತ್ತಿರುವುದಾಗಿ ಹೇಳಿಕೊಳ್ಳಲು ಯಾವುದೇ ನೈತಿಕ ಹಕ್ಕನ್ನು ಹೊಂದಿಲ್ಲ ಎಂದು ಹರೀಶ್ ಹೇಳಿದ್ದಾರೆ. ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಮೊಹಮ್ಮದ್ ಇಶಾಕ್ ದಾರ್ (Mohammad Ishaq Dar) ಅವರು ಕಾಶ್ಮೀರವನ್ನು “ಅಂತರರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ತೆರೆದ ಗಾಯ” ಎಂದು ಬಣ್ಣಿಸಿದ್ದಕ್ಕೆ ಪ್ರತಿಯಾಗಿ ಈ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪಾಕಿಸ್ತಾನವು ಸುಳ್ಳು ಮತ್ತು ತಪ್ಪು ಮಾಹಿತಿಯನ್ನು ಹರಡುವ ಮೂಲಕ ಭದ್ರತಾ ಮಂಡಳಿಯ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬಾರದು ಎಂದು ಹರೀಶ್ ಎಚ್ಚರಿಸಿದ್ದಾರೆ. ಯಾವುದೇ ರೀತಿಯ ಭಯೋತ್ಪಾದನೆಯನ್ನು, ವಿಶೇಷವಾಗಿ ಮುಗ್ಧ ನಾಗರಿಕರ ವಿರುದ್ಧ ನಡೆಯುವ ಭಯೋತ್ಪಾದನೆಯನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
“ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಪಾಕಿಸ್ತಾನಕ್ಕೆ ಅಲ್ಲಿ ಯಾವುದೇ ಕಾನೂನುಬದ್ಧ ಹಕ್ಕುಗಳಿಲ್ಲ” ಎಂದು ಹರೀಶ್ ಸ್ಪಷ್ಟಪಡಿಸಿದ್ದಾರೆ.