Kolar : ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕೋಲಾರ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ಓಬವ್ವ ಆತ್ಮರಕ್ಷಣಾ ಕಲೆಯ ಕೌಶಲ ತರಬೇತಿ (Obavva Self Defence Art & Skills Training) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಮುನಿರತ್ನ “ಮಹಿಳೆಯರ ಮೇಲೆ ನಿರಂತರವಾಗಿ ಶೋಷಣೆ, ದಬ್ಬಾಳಿಕೆ, ದೌರ್ಜನ್ಯ ನಡೆಯುತ್ತಿದ್ದು ಈ ದೌರ್ಜನ್ಯ ತಡೆಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ವಸತಿ ಶಾಲೆಗಳಲ್ಲಿ ಪ್ರತಿನಿತ್ಯ ಶಾಲಾ ಅವಧಿಯಲ್ಲಿ ಒಂದು ತಾಸು ಆತ್ಮರಕ್ಷಣಾ ಕಲೆ ಕಲಿಕೆಗೆ ಮೀಸಲಿತ್ತು ಮಹಿಳೆಯರ ಮೇಲೆ ಸಮಾಜದಲ್ಲಿ ನಡೆಯುವ ದೌರ್ಜನ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ ಧೈರ್ಯ ತುಂಬಿ ಸ್ವಾವಲಂಬಿಗಳಾಗಿಸಬೇಕು. ಹೆಣ್ಣು ಮಕ್ಕಳಿಗೆ ಶಿಕ್ಷಣದ ಜತೆಗೆ ಆತ್ಮರಕ್ಷಣೆ ಮಾಡಿಕೊಳ್ಳುವ ತರಬೇತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು ವೀರ ವನಿತೆ ಒನಕೆ ಓಬವ್ವ ರ ಹೆಸರನ್ನು ಈ ಕಾರ್ಯಕ್ರಮಕ್ಕೆ ಇಡಲಾಗಿದೆ. ಹೆಣ್ಣು ಮಕ್ಕಳು ಆತ್ಮರಕ್ಷಣೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣಾ ಕಲೆಯ ತರಬೇತಿ ನೀಡಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯುಕೇಶ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋನಾಲಿ ವರ್ಣೇಕರ್ , ವರ್ತೂರ್ ಪ್ರಕಾಶ್ ಉಪಸ್ಥಿತರಿದ್ದರು.