Delhi: 2019ರಲ್ಲಿ ದೆಹಲಿಯಲ್ಲಿ ಸಾರ್ವಜನಿಕ ಹಣವನ್ನು hoarding ಗಾಗಿ ದುರ್ಬಳಕೆ ಮಾಡಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ (FIR against Kejriwal) ಎಂದು ದೆಹಲಿ ಪೊಲೀಸರು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಈ ಕುರಿತು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನೇಹಾ ಮಿತ್ತಲ್ ಅವರಿಗೆ ವರದಿ ಸಲ್ಲಿಸಿದ್ದು, ಮಾರ್ಚ್ 11ರಂದು ನ್ಯಾಯಾಧೀಶರು ಸಾರ್ವಜನಿಕ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ಆದೇಶಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸಲು ಅವಕಾಶ ಕೋರಿದ್ದು, ಮುಂದಿನ ವಿಚಾರಣೆಯನ್ನು ಏಪ್ರಿಲ್ 19ಕ್ಕೆ ನಿಗದಿಪಡಿಸಲಾಗಿದೆ.
ಕೇಜ್ರಿವಾಲ್ ಮಾತ್ರವಲ್ಲದೆ, ಮಾಜಿ ಶಾಸಕ ಗುಲಾಬ್ ಸಿಂಗ್ ಮತ್ತು ದ್ವಾರಕ ಕೌನ್ಸಿಲರ್ ನಿತಿಕಾ ಶರ್ಮಾ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ: 2019ರಲ್ಲಿ ದ್ವಾರಕ ಪ್ರದೇಶದಲ್ಲಿ ಅಕ್ರಮವಾಗಿ hoarding ಅಳವಡಿಸಿ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂಬ ಆರೋಪದ ಮೇಲೆ ದೂರು ದಾಖಲಾಗಿತ್ತು. ಈ ಸಂಬಂಧ ಸಾಕ್ಷ್ಯಸಹಿತ ಶಿವಕುಮಾರ್ ಸಕ್ಸೇನಾ ಕೋರ್ಟ್ ಗೆ ದೂರು ಸಲ್ಲಿಸಿದ್ದರು.
ಕೋರ್ಟ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಅನಧಿಕೃತ ಹೋರ್ಡಿಂಗ್ ಗಳು ನಗರ ಸೌಂದರ್ಯಕ್ಕೆ ಹಾನಿ ಮಾಡುವುದು ಮಾತ್ರವಲ್ಲದೆ, ಟ್ರಾಫಿಕ್ ಸಮಸ್ಯೆಯೂ ಉಂಟುಮಾಡುತ್ತದೆ ಎಂದು ಅಭಿಪ್ರಾಯಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಸೇರಿದಂತೆ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶಿಸಲಾಗಿತ್ತು.
ಈ ಪ್ರಕರಣವನ್ನು ಸದ್ಯ ರೌಸ್ ಅವೆನ್ಯೂ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.