Bengaluru: ನಮ್ಮ ಮೆಟ್ರೋ (Namma Metro) ಪ್ರಯಾಣ ದರ ಏರಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಮೆಟ್ರೋ ದರ ಹೆಚ್ಚಳದಿಂದ ಅಸಮಾಧಾನಗೊಂಡ ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಹಿನ್ನೆಲೆದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮೆಟ್ರೋ ದರ ನಿಗದಿಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ರಾಜ್ಯ ಸರ್ಕಾರವೇ ಮೆಟ್ರೋ ದರ ಪರಿಷ್ಕರಣೆಯ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಆಕ್ಷೇಪಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯರ ಹೇಳಿಕೆಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದು, 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಇಲಾಖೆಗಳಲ್ಲಿಯೂ ದರ ಏರಿಕೆ ಸಾಮಾನ್ಯವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಎಂಟಿಸಿ ಬಸ್ ದರ, ವಿದ್ಯುತ್ ಬಿಲ್, ಆಸ್ತಿ ತೆರಿಗೆ ಮತ್ತು ಅಬಕಾರಿ ಸುಂಕ ಸೇರಿದಂತೆ ಹಲವಾರು ಸೇವೆಗಳ ದರ ಹೆಚ್ಚಾಗಿದೆ ಎಂದಿದ್ದಾರೆ.
BMRCL ಮೆಟ್ರೋ ದರ ಪರಿಷ್ಕರಣೆಗಾಗಿ ಸಮಿತಿ ರಚಿಸಲು ರಾಜ್ಯ ಸರ್ಕಾರವೇ ಸಲಹೆ ನೀಡಿತ್ತು. ಈ ಸಮಿತಿಯಲ್ಲಿನ ರಾಜ್ಯ ಪ್ರತಿನಿಧಿಗಳ ಒತ್ತಾಯದ ಮೇರೆಗೆ ದರ ಪರಿಷ್ಕರಣೆಯ ವರದಿ ಬಿಡುಗಡೆ ಮಾಡಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಈ ದರ ಏರಿಕೆಗೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದೆ. “ಮುಖ್ಯಮಂತ್ರಿಗಳಿಗೆ ಜನರ ಸಮಸ್ಯೆಗಳ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಪರಿಷ್ಕೃತ ದರಗಳನ್ನು ಮರು ಪರಿಶೀಲಿಸಿ ನ್ಯಾಯಸಮ್ಮತ ದರ ನಿಗದಿಪಡಿಸಬೇಕು. ದರ ಕಡಿಮೆ ಮಾಡಲು ಯಾವುದೇ ಕಾನೂನು ಅಡ್ಡಿಯಾಗುವುದಿಲ್ಲ,” ಎಂದು ತೇಜಸ್ವಿ ಸೂರ್ಯ ಹೇಳಿದರು.
ಬೆಂಗಳೂರಿನ ಸಂಸದರು ಹಾಗೂ ಕೇಂದ್ರ ಸರ್ಕಾರದ ಅಧಿಕಾರಿಗಳು ದರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತೊಡಗಿರುವುದರಿಂದ, ಜನರ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.