Srinagar: ಜಮ್ಮು ಮತ್ತು ಕಾಶ್ಮೀರ (Jammu-Kashmir) ನಿಯೋಜಿತ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಇಂದು ನೂತನ CM ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಖಿಲೇಶ್ ಯಾದವ್, ಪ್ರಕಾಶ್ ಕಾರಟ್, ಸುಪ್ರಿಯಾ ಸುಳೆ ಮತ್ತು ಕನಿಮೊಳಿ ಸೇರಿದಂತೆ ಇಂಡಿಯಾ ಕೂಟದ ನಾಯಕರು ಶ್ರೀನಗರಕ್ಕೆ (Srinagar) ಆಗಮಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ನ್ಯಾಷನಲ್ ಕಾನ್ಫರೆನ್ಸ್ (National Conference) ನಾಯಕ ಒಮರ್ ಅಬ್ದುಲ್ಲಾ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹಿಂಪಡೆಯಲಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯ ನಂತರ ಹೊಸ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ. ಈ ಸಂಬಂಧ ಗೃಹ ಸಚಿವಾಲಯ ಭಾನುವಾರ ಗೆಜೆಟ್ ಅಧಿಸೂಚನೆ ಕೂಡಾ ಹೊರಡಿಸಿದೆ.
ಈ ಕುರಿತು ಒಮರ್ ಅಬ್ದುಲ್ಲಾ ಅವರಿಗೆ ಪತ್ರ ರವಾನಿಸಿರುವ ಲೆಫ್ಟಿನೆಂಟ್ ಗವರ್ನರ್, ಶಾಸಕಾಂಗ ಪಕ್ಷದ ನಾಯಕರಾದ ನಿಮಗೆ ಮತ್ತು ಸಚಿವ ಸಂಪುಟದ ಸದಸ್ಯರಿಗೆ ಬುಧವಾರ ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಲಾಗಿದೆ. ದಾಲ್ ಸರೋವರದ ದಡದಲ್ಲಿರುವ ಶೇರ್ ಎ ಕಾಶ್ಮೀರ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಬೆಳಗ್ಗೆ 11.30 ಕ್ಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಲಾಗಿದೆ.
ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು, ಹೊಸ ಕಾಶ್ಮೀರ ಮನವೊಲಿಕೆ ಮಾಡುವಲ್ಲಿ ವಿಫಲವಾಗಿದ್ದು ಈ ಬಾರಿಯ ಬಿಜೆಪಿ ಸೋಲಿಗೆ ಮುಖ್ಯ ಕಾರಣ ಎನ್ನಲಾಗುತ್ತಿದೆ. ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ), ಪಿಡಿಪಿಯಂತಹ ಪ್ರಾದೇಶಿಕ ಪಕ್ಷಗಳು ಕಾಶ್ಮೀರಿ ವಿರೋಧಿ ನೀತಿ ಎಂದು ಬಿಜೆಪಿ ವಿರುದ್ಧ ಅಸ್ತ್ರ ಮಾಡಿಕೊಂಡವು. ಭಯೋತ್ಪಾದನೆ ನಿಗ್ರಹದ ಹೆಸರಿನಲ್ಲಿ ಕಾಶ್ಮೀರದಲ್ಲಿ ಭಾರಿ ಭದ್ರತೆ ನಿಯೋಜಿಸಿದ್ದು ಕೂಡ ಬಿಜೆಪಿಗೆ ಹಿನ್ನಡೆಯಾಯಿತು. ವಾಕ್ ಸ್ವಾತಂತ್ರ್ಯದ ಹಕ್ಕನ್ನು ನಿಗ್ರಹಿಸಲಾಗುತ್ತಿದೆ ಎಂದು ಸ್ಥಳೀಯ ಪಕ್ಷಗಳು ಪ್ರಚಾರ ಮಾಡಿದವು.