Bengaluru: ಬಡವರ ಮೇಲಿನ ದೌರ್ಜನ್ಯ ತಡೆಯಲು ಸರ್ಕಾರ ಸುಗ್ರೀವಾಜ್ಞೆ ತರಲು ನಿರ್ಧರಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿಳಿಸಿದ್ದಾರೆ. ಮೈಕ್ರೋ ಫೈನಾನ್ಸ್ (microfinance) ಸಂಸ್ಥೆಗಳ ಮೂಲಕ ಸಾಲ ವಸೂಲಿ ಹೆಸರಲ್ಲಿ ಬಡವರನ್ನು ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸದಾಶಿವನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೌಡಿಗಳ ಮೂಲಕ ಬೆದರಿಕೆ, ಕಾನೂನು ಕೈಗೆ ತೆಗೆದುಕೊಳ್ಳುವ ವರ್ತನೆಗಳನ್ನು ತಡೆಯಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲಾಗುತ್ತಿದೆ. ಈಗಾಗಲೇ ಬೆಳಗಾವಿ, ಬೀದರ್, ಮೈಸೂರು, ರಾಮನಗರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಮುಖ್ಯಮಂತ್ರಿ ಹಾಗೂ ಸಹಕಾರ ಸಚಿವರ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಸುಗ್ರೀವಾಜ್ಞೆಯನ್ನು ರಾಜ್ಯಪಾಲರಿಗೆ ಕಳುಹಿಸಲು ಕೆಲವೇ ದಿನಗಳೊಳಗೆ ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದರು.
ಪ್ರತಿ ಜಿಲ್ಲೆಯಲ್ಲಿ ಸಾಲದ ಹೆಸರಿನಲ್ಲಿ ಬಡವರ ಮೇಲೆ ನಡೆಯುವ ದೌರ್ಜನ್ಯಕ್ಕೆ ದೂರು ನೀಡಲು ಸಹಾಯವಾಣಿ ವ್ಯವಸ್ಥೆ ಮಾಡಲಾಗಿದೆ. ಜನತೆ ಹಾಗೂ ರಾಜಕೀಯ ಕಾರ್ಯಕರ್ತರು ಈ ಸಹಾಯವಾಣಿಯನ್ನು ಉಪಯೋಗಿಸಿ, ಬಡವರಿಗೆ ನೆರವಾಗಬೇಕು ಎಂದು ಡಿಕೆಶಿ ಮನವಿ ಮಾಡಿದರು.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕ ದಿವಾಳಿಯಾಗುತ್ತಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಕೇಂದ್ರ ಸರ್ಕಾರವೇ ಲಕ್ಷಾಂತರ ಕೋಟಿಗಳ ಸಾಲ ಮಾಡಿದೆ. ನಮ್ಮ ಸರ್ಕಾರ ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನೆರವಾಗುತ್ತಿದೆ. ಇದನ್ನು ಮತ BANK ರಾಜಕೀಯ ಎಂದು ಹೇಳಬಾರದು. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ನೀಡಿದ ಕೊಡುಗೆಯ ಪಟ್ಟಿ ಒಮ್ಮೆ ಜನರಿಗೆ ತೋರಿಸಲಿ” ಎಂದು ಸವಾಲು ಹಾಕಿದರು.
ಜೆಡಿಎಸ್ ಶಾಸಕರು ನಿಮ್ಮ ಸಂಪರ್ಕದಲ್ಲಿದರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಯಾವುದೇ ಶಾಸಕರು ನಮ್ಮ ಸಂಪರ್ಕದಲ್ಲಿ ಇಲ್ಲ. ಜೆಡಿಎಸ್ ಕಾರ್ಯಕರ್ತರು ತಮ್ಮ ಭವಿಷ್ಯವನ್ನು ತಾವೇ ನಿರ್ಧರಿಸಬೇಕು. ಅನೇಕರು ನಮ್ಮ ಪಕ್ಷ ಸೇರಲು ಬಯಸುತ್ತಿದ್ದಾರೆ. ಆದರೆ ಈ ಬಗ್ಗೆ ನಾನು ಯಾವುದೇ ಶಾಸಕರೊಂದಿಗೆ ಮಾತುಕತೆ ನಡೆಸಿಲ್ಲ” ಎಂದು ಸ್ಪಷ್ಟಪಡಿಸಿದರು.
ಸಿಎಂ ಬದಲಾವಣೆಯ ದಿನಾಂಕವನ್ನು ಘೋಷಿಸಿರುವ ಆರ್. ಅಶೋಕ್ ಅವರ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, “ನಾನು ಜ್ಯೋತಿಷ್ಯ ಕೇಳಲು ಆಸಕ್ತನಾಗಿದ್ದೇನೆ. ಅಶೋಕ್ ಅವರು ಈಗ ಜ್ಯೋತಿಷ್ಯನಾಗಿ ಬೋರ್ಡ್ ಹಾಕಿಕೊಂಡಿದ್ದಾರೆ. ನಾನು ಅವರ ಬಳಿ ಹೋಗಿ ಶಾಸ್ತ್ರ ಕೇಳುತ್ತೇನೆ” ಎಂದು ಲೇವಡಿ ಮಾಡಿದರು.