
500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ಹಿರಿಯ ಕನ್ನಡ ನಟ ಬ್ಯಾಂಕ್ ಜನಾರ್ಧನ್ (Bank Janardhan) ಅವರು ಇಂದು (ವಯಸ್ಸು 76) ಬೆಳಗಿನ ಜಾವ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ನಿಧನದ ಸುದ್ದಿ ಚಿತ್ರರಂಗದಲ್ಲಿ ದುಃಖದ ಛಾಯೆ ಮೂಡಿಸಿದೆ.
ಬೆಂಗಳೂರಿನ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ಜನಾರ್ಧನ್ ಅವರು ಹಲವು ವರ್ಷಗಳಿಂದ ವಯೋಸಹಜ ಕಾಯಿಲೆ ಎದುರಿಸುತ್ತಿದ್ದರು.
80-90ರ ದಶಕಗಳಲ್ಲಿ ಜನಪ್ರಿಯರಾದ ಅವರು ಶ್, ತರ್ಲೆ ನಂಮಗ, ನ್ಯೂಸ್ ಸೇರಿದಂತೆ ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೀರಿಯಲ್‌ಗಳಲ್ಲಿ ಪಾಪ ಪಾಂಡು, ಮಾಂಗಲ್ಯ, ಜೋಕಾಲಿ, ರೋಬೋ ಫ್ಯಾಮಿಲಿ ಮುಂತಾದವುಗಳಲ್ಲಿ ಭಿನ್ನ ಭಿನ್ನ ಪಾತ್ರಗಳಿಂದ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದಾರೆ.
1949ರಲ್ಲಿ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದ ಅವರು, ತಮ್ಮ ಹಾಸ್ಯಭರಿತ ಪಾತ್ರಗಳ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದರು. ಗಣೇಶ ಸುಬ್ರಮಣ್ಯ, ಪೋಲೀಸನ ಹೆಂಡತಿ, ರಂಬೆ ಊರ್ವಶಿ ಮೇನಕೆ, ರಕ್ತ ಕಣ್ಣೀರು, ಕೋಟಿಗೊಬ್ಬ 2 ಸೇರಿದಂತೆ ನೂರಾರು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಅವರ ಅಗಲಿಕೆಗೆ ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ಹಾಗೂ ರಾಜಕೀಯ ಕ್ಷೇತ್ರದವರು ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, “ಜನಾರ್ಧನ್ ಅವರು ಪ್ರತಿಯೊಂದು ಪಾತ್ರಕ್ಕೂ ಜೀವ ತುಂಬುತ್ತಿದ್ದವರು. ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ” ಎಂದು ತಮ್ಮ ಟ್ವೀಟ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.