Bengaluru: ಕರ್ನಾಟಕದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ (government primary and secondary schools) 50 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದೆ. ಈ ಕೊರತೆಯನ್ನು ಸರಿಪಡಿಸುವ ಬದಲು ಸರ್ಕಾರ ಕಡಿಮೆ ಹಾಜರಾತಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.
ಕಾಂಗ್ರೆಸ್ ಸರ್ಕಾರ ‘ಹಬ್ ಅಂಡ್ ಸ್ಪೋಕ್’ ಮಾದರಿಯಲ್ಲಿ 4200 ಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚಲು ಯೋಜನೆ ಮಾಡುತ್ತಿದೆ. ಈ ನಿರ್ಧಾರದ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾಗಿವೆ.
ಈ ಹಿಂದೆ ಬಿಜೆಪಿ ಸರ್ಕಾರವೂ NEP-2020 ಅಡಿಯಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿತ್ತು. ಆಗ ವ್ಯಾಪಕ ವಿರೋಧ ವ್ಯಕ್ತವಾದ ನಂತರ ಯೋಜನೆ ಕೈಬಿಟ್ಟಿತ್ತು. ಈಗ ಮತ್ತೆ ಇದೇ ಪ್ರಯತ್ನವಾಗುತ್ತಿರುವುದಕ್ಕೆ ವಿದ್ಯಾರ್ಥಿ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಸರ್ಕಾರ ಕೆಲವು ಶಾಲೆಗಳ ಕಡಿಮೆ ಹಾಜರಾತಿಯನ್ನು ನೆಪವಿಟ್ಟು ಅವುಗಳನ್ನು ಇತರ ಶಾಲೆಗಳೊಂದಿಗೆ ವಿಲೀನಗೊಳಿಸಲು ಯೋಜನೆ ರೂಪಿಸಿದೆ. 10 ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳನ್ನು ಮುಚ್ಚುವ ಬಗ್ಗೆ ಸರ್ಕಾರದ ಸುತ್ತೋಲೆ ಹೊರಡಿಸಲಾಗಿದೆ.
ಈ ನಿರ್ಧಾರ ಬಡವರ ಮಕ್ಕಳ ಶಿಕ್ಷಣ ಹಕ್ಕನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆ. ಶಾಲೆ ಮುಚ್ಚುವ ಬದಲಿಗೆ ಶಿಕ್ಷಕರ ನೇಮಕ ಮಾಡಬೇಕೆಂದು ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸುತ್ತಿವೆ.
ಸರ್ಕಾರಿ ಶಾಲೆಗಳಲ್ಲಿ ಬಡ ಮಕ್ಕಳ ಶೇ. 90 ರಷ್ಟು ವಿದ್ಯಾರ್ಥಿಗಳು ಓದುತ್ತಿರುವುದರಿಂದ, ಸರ್ಕಾರ ಶಾಲೆಗಳ ವಿಲೀನ ಬದಲು ಅವುಗಳ ಅಭಿವೃದ್ಧಿಗೆ ಹೆಚ್ಚು ಗಮನಹರಿಸಬೇಕು. ಶಿಕ್ಷಕರ ನೇಮಕಾತಿ ಮಾಡಬೇಕು ಮತ್ತು ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.