Mangaluru: ರೈಲ್ವೆ ನೇಮಕಾತಿ (Railway Exams) ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಂದ ಜನಿವಾರ ಅಥವಾ ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ (Somanna) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪೂರ್ವದಲ್ಲಿ, ಪರೀಕ್ಷಾ ಪ್ರವೇಶ ಪತ್ರದಲ್ಲಿ ಧಾರ್ಮಿಕ ಸಂಕೇತಗಳು ಹಾಗೂ ಮಂಗಳಸೂತ್ರ ತೆಗೆದು ಬರಬೇಕು ಎಂದು ಹೇಳಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಈ ಬಗ್ಗೆ ದಕ್ಷಿಣ ಕನ್ನಡದ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರೈಲ್ವೆ ಸಚಿವರ ಗಮನಕ್ಕೆ ತಂದಿದ್ದರು.
ಬ್ರಿಜೇಶ್ ಚೌಟ ಅವರು ಎಕ್ಸ್ ಸಂದೇಶದಲ್ಲಿ, “ಮಂಗಳಸೂತ್ರ ಮತ್ತು ಜನಿವಾರದಂತಹ ಧಾರ್ಮಿಕ ಸಂಕೇತಗಳನ್ನು ತೆಗೆಸಬಾರದು ಎಂದು ಸೋಮಣ್ಣ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ,” ಎಂದು ತಿಳಿಸಿದ್ದಾರೆ.
ಇತ್ತೀಚೆಗಷ್ಟೆ ಶಿವಮೊಗ್ಗ, ಧಾರವಾಡ ಮತ್ತು ಬೀದರ್ ಜಿಲ್ಲೆಗಳಲ್ಲಿ ಕರ್ನಾಟಕ ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ಪಿಎಐಎಲ್ ಅರ್ಜಿ ಹೈಕೋರ್ಟಿನಲ್ಲಿ ಸಲ್ಲಿಸಲಾಗಿದೆ.
ರೈಲ್ವೆ ನೇಮಕಾತಿ ಮಂಡಳಿ ಕ್ರಮದ ವಿರುದ್ಧ ವಿಎಚ್ಪಿ ಮುಖಂಡ ಶರಣ್ ಪಂಪುವೆಲ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಹಿಂದೂ ಭಾವನೆಗಳಿಗೆ ಧಕ್ಕೆಯಾಗದಂತೆ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು ಎಂದು ಅವರು ಆಗ್ರಹಿಸಿದ್ದರು. ಈಗ ಸಚಿವ ಸೋಮಣ್ಣ ಮಧ್ಯಪ್ರವೇಶದಿಂದ ಸಮಸ್ಯೆ ಪರಿಹಾರವಾಗಿದೆ.
ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳ ಪರೀಕ್ಷೆಗಳು ಏಪ್ರಿಲ್ 28, 29 ಮತ್ತು 30ರಂದು ಮಂಗಳೂರಿನ ಬೋಂದೆಲಿನ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ನಡೆಯಲಿವೆ.