ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ (Karnataka High Court) ತೀರ್ಪಿನ ವಿರುದ್ಧ ರೇವಣ್ಣ ಮೇಲ್ಮನವಿ ಸಲ್ಲಿಸಿದ್ದರು.
ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಅವರ ಮನವಿಯನ್ನು ತಿರಸ್ಕರಿಸಿ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.
ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಆರೋಪಗಳು ತಮ್ಮ ಕಕ್ಷಿದಾರರ ರಾಜಕೀಯ ಪ್ರಭಾವವನ್ನು ಕುಗ್ಗಿಸುವ ಷಡ್ಯಂತ್ರದ ಭಾಗವಾಗಿದೆ ಎಂದು ವಾದಿಸಿದರು.
ರೇವಣ್ಣ ಪ್ರಭಾವಿ ಎಂದು ಪರಿಗಣಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ರೇವಣ್ಣ ಆರು ತಿಂಗಳ ನಂತರ ಜಾಮೀನಿಗೆ ಮರು ಅರ್ಜಿ ಸಲ್ಲಿಸಬಹುದೇ ಎಂಬ ಬಗ್ಗೆ ಸುಪ್ರೀಂ ಕೋರ್ಟ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಮೇ ತಿಂಗಳಲ್ಲಿ ಜರ್ಮನಿಯಿಂದ ವಾಪಸಾದ ಬಳಿಕ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಸ್‌ಐಟಿಯಿಂದ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪವಿದೆ.
ತಂದೆ ಹೆಚ್.ಡಿ.ರೇವಣ್ಣ ಅವರನ್ನೂ ಬಂಧಿಸಲಾಗಿತ್ತು ಆದರೆ ನಂತರ ಜಾಮೀನು ಮಂಜೂರು ಮಾಡಲಾಗಿದ್ದು, ಅವರ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆದರು. ಈ ಬೆಳವಣಿಗೆಗಳ ನಡುವೆಯೂ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಜೈಲಿನಲ್ಲೇ ಉಳಿದಿದ್ದಾರೆ.