Tirupati: ಆಂಧ್ರಪ್ರದೇಶದ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ (Sri Venkateswara Swamy temple) ಲಡ್ಡುಗಳನ್ನು (Laddu) ತಯಾರಿಸುವಲ್ಲಿ ಪ್ರಾಣಿಗಳ ಕೊಬ್ಬನ್ನು (animal fat) ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ (Supreme Court) ವಿಚಾರಣೆ ನಡೆಸಿತು.
ತಿರುಪತಿ ಲಡ್ಡು ವಿವಾದದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. CBI, ರಾಜ್ಯ ಪೊಲೀಸ್ ಮತ್ತು FSSAI ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಸ್ವತಂತ್ರ SIT ಯನ್ನು ರಚಿಸಲು ಸೂಚಿಸಿದೆ.
ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರ ಪೀಠವು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.
“ಈ ವಿಷಯದ ಬಗ್ಗೆ ರಾಜಕೀಯ ಡ್ರಾಮವನ್ನು ಬಯಸುವುದಿಲ್ಲ, ಏಕೆಂದರೆ ಇದು ಪ್ರಪಂಚದಾದ್ಯಂತ ಇರುವ ಲಕ್ಷಾಂತರ ಭಕ್ತರ ನಂಬಿಕೆಯ ವಿಷಯವಾಗಿದೆ” ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠವು ಹೇಳಿದೆ.
ಸೆಪ್ಟೆಂಬರ್ 30 ರಂದು ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ರಾಜ್ಯವು ನೇಮಿಸಿದ ಎಸ್ಐಟಿ ತನಿಖೆಯನ್ನು ಮುಂದುವರಿಸಬೇಕೇ ಅಥವಾ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕೇ ಎಂದು ನಿರ್ಧರಿಸಲು ಸಹಾಯ ಮಾಡುವಂತೆ ಪೀಠವು ಮೆಹ್ತಾ ಅವರನ್ನು ಕೇಳಿತ್ತು.
ಪ್ರಸಾದ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪವನ್ನು ಬಳಸಲಾಗಿದೆಯೇ ಅಥವಾ ಇಲ್ಲವೇ ಎಂದು ಆಂಧ್ರಪ್ರದೇಶ ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಸುಪ್ರೀಂ ಕೋರ್ಟ್ ಕೇಳಿತ್ತು.
TDP ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ, ಲಡ್ಡುಗಳ ರುಚಿ ಚೆನ್ನಾಗಿಲ್ಲ ಎಂದು ಜನರು ದೂರಿದ್ದಾರೆ, ಕಲುಷಿತ ತುಪ್ಪವನ್ನು ಪ್ರಸಾದಕ್ಕೆ ಬಳಸಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ.
ಯಾವುದೇ ಆಧಾರವಿಲ್ಲದೆ ಕಲಬೆರಕೆ ಪ್ರಸಾದದ ಆರೋಪವನ್ನು ಸಾರ್ವಜನಿಕವಾಗಿ ಪ್ರಕಟಿಸಿ ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಸಿಎಂ ಎನ್ ಚಂದ್ರಬಾಬು ನಾಯ್ಡು (CM N Chandrababu Naidu) ನೇತೃತ್ವದ ಆಂಧ್ರಪ್ರದೇಶವನ್ನು ಸೋಮವಾರ ಟೀಕಿಸಿದ್ದಾರೆ.