New Delhi: ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ (Vice Presidential Election) ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರನ್ನು ಇಂಡಿಯಾ ಬ್ಲಾಕ್ (ವಿರೋಧ ಪಕ್ಷಗಳ ಒಕ್ಕೂಟ) ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ.
ಇನ್ನೊಂದೆಡೆ, NDA ಪರವಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಈಗಾಗಲೇ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳನ್ನು ರಾಧಾಕೃಷ್ಣನ್‌ಗೆ ಬೆಂಬಲ ನೀಡುವಂತೆ ಒತ್ತಾಯಿಸಿದರೂ, ಇಂಡಿಯಾ ಬ್ಲಾಕ್ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ಖರ್ಗೆ ಅವರು, “ಈ ಚುನಾವಣೆ ಸೈದ್ಧಾಂತಿಕ ಹೋರಾಟ. ಎಲ್ಲಾ ವಿರೋಧ ಪಕ್ಷಗಳು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಒಟ್ಟಾಗಿವೆ” ಎಂದು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಆಂಧ್ರಪ್ರದೇಶದ ರಾಜಕೀಯ ಸಮೀಕರಣವನ್ನು ಗಮನದಲ್ಲಿಟ್ಟುಕೊಂಡು ಸುದರ್ಶನ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ. ಎನ್ಡಿಎ ಪರ ತೆಲುಗು ಪಕ್ಷಗಳಾದ ಟಿಡಿಪಿ ಮತ್ತು ಜನಸೇನಾ ಮೇಲೆ ಒತ್ತಡ ಹೇರಲು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿದುಬಂದಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪ್ರಕಾರ, ಎನ್ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್. ಅವರು ತಮಿಳುನಾಡಿನ ಪ್ರಮುಖ ನಾಯಕರು ಹಾಗೂ ಆರ್ಎಸ್ಎಸ್ ಹಿನ್ನೆಲೆಯವರು. ತಮಿಳುನಾಡಿನಲ್ಲಿ ಬಿಜೆಪಿಯ ನೆಲೆಯ ಬಲಪಡಿಸಲು ಅವರ ಆಯ್ಕೆಯಾಗಿದೆ ಎಂದು ರಾಜಕೀಯ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ಹಿಂದಿನ ಉಪರಾಷ್ಟ್ರಪತಿ ಜಗದೀಪ್ ಧಂಖರ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ, ಹೊಸ ಚುನಾವಣೆಯನ್ನು ಸೆಪ್ಟೆಂಬರ್ 9ರಂದು ನಡೆಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನ ಆಗಸ್ಟ್ 22.